ಬೆಂಗಳೂರು: ಪ್ರಸಕ್ತ ಸಾಲಿನಿಂದ ಎಲ್ಲ ಖಾಸಗಿ, ಅನುದಾನಿ ಶಾಲಾ ಕಾಲೇಜುಗಳಲ್ಲಿ ಎನ್‍ಎಸ್‍ಎಸ್ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.
ವಿಕಾಸ ಸೌಧದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಮಾತನಾಡಿದರು.
2021-22ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೆ ಸ್ವಾತಂತ್ರ್ಯ ಪೂರ್ವದ ಹೋರಾಟ, ಸ್ವಾತಂತ್ರ್ಯದ ನಂತರದ ಸಾಧನೆಗಳು, ಮುಂದಿನ ಗುರಿಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮದ ಕ್ರಿಯಾಯೋಜನೆ ರೂಪಿಸಿ ಆಕರ್ಷಕವಾಗಿ ಕಾರ್ಯಕ್ರಮ ನಡೆಸಲು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ 13 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೂ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಗಣರಾಜ್ಯೋತ್ಸವ ಪೂರ್ವಭಾವಿ ಪಥಸಂಚಲನದ ಆಯ್ಕೆ ಶಿಬಿರ ಮತ್ತು ಪಥಸಂಚಲನ ತರಬೇತಿ ಶಿಬಿರ ನಡೆಸುವ ಜವಾಬ್ದಾರಿಯನ್ನು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೀಡಲಾಯಿತು.
ಮಂಗಳೂರು ವಿವಿ, ಗುಲ್ಬರ್ಗ ವಿವಿ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಬೆಂಗಳೂರು, ಕುವೆಂಪು ವಿವಿ ಶಿವಮೊಗ್ಗ, ಕರ್ನಾಟಕ ವಿವಿ ಧಾರವಾಡ, ಕರ್ನಾಟಕ ರಾಜ್ಯ ಕಾನೂನು ವಿವಿ ಹುಬ್ಬಳ್ಳಿ, ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಜ್ಞಾನಗಳ ವಿವಿ ಬೀದರ್, ಬೆಂಗಳೂರು ಕೇಂದ್ರ ವಿವಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕೋಲಾರ ಮತ್ತು ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಭಾವೈಕ್ಯತಾ ಶಿಬಿರ ಆಯೋಜಿಸಲು ತೀರ್ಮಾನಿಸಲಾಯಿತು.
2021-22 ನೇ ಸಾಲಿನಲ್ಲಿ ಯುವಜನೋತ್ಸವ ನಡೆಸುವ ಜವಾಬ್ದಾರಿಯನ್ನು ಮೈಸೂರು ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನೀಡಲಾಯಿತು. ರಾಜ್ಯಮಟ್ಟದ ಎನ್ ಎಸ್ ಎಸ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಬೆಂಗಳೂರಿನ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಲ್ಲಿ ನಡೆಸಲಾಗುವುದು.


























































