ದೆಹಲಿ: ಹಾಸನ ಜಿಲ್ಲೆಯ ಪ್ರಮುಖ ರಸ್ತೆಯನ್ನು ಮೇಲ್ದರ್ಜೆಗೇರಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ
ದೆಹಲಿಯಲ್ಲಿ ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ಮಾಡಿ ಹಾಸನ ಜಿಲ್ಲೆಯಲ್ಲಿ ಹಾದು ಹೋಗುವ ಚನ್ನರಾಯಪಟ್ಟಣ- ಹೊಳೆನರಸೀಪುರ- ಅರಕಲಗೂಡು- ಮಡಿಕೇರಿ – ಮಾರ್ಕೋಟ – ಕೇರಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಮನವಿ ಮಾಡಿದರು. ಈ ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಪರಿವರಗತಿಸಲು ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದರು.
ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಶೀಘ್ರದಲ್ಲೇ ಅನುಮೋದನೆ ನೀಡುವ ಭರವಸೆ ಸಚಿವ ನಿತಿನ್ ಗಡ್ಕರಿ ಅವರಿಂದ ಸಿಕ್ಕಿದೆ. ಇದೇ ವೇಳೆ, ಮತ್ತೊಂದು ರಾಷ್ಟ್ರೀಯ ಹೆದ್ದಾರಿ ಹೊಳೆನರಸೀಪುರ ತಾಲ್ಲೂಕಿನ ಯಡಗೋಡನಹಳ್ಳಿ ಬಿಳಿಕೆರೆ ಮತ್ತು ಹಾಸನ ಬೇಲೂರು ಎರಡು ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸುವ ಸಂಬಂಧ ಟೆಂಡರ್ ಕರೆಯಲು ಅನುಮೋದನೆ ನೀಡುವಂತೆ ಮನವಿ ಮಾಡಲಾಯಿತು.
ಈ ಮನವಿಗೆ ಸ್ಪಂದಿಸಿದ ಕೇಂದ್ರ ಹೆದ್ದಾರಿ ಸಚಿವರು ನಿತಿನ್ ಗಡ್ಕರಿಯವರು ಟೆಂಡರ್ ಕೆರಯಲು ಅನುಮೋದನೆ ನೀಡಿದರು ಎಂದು ಸಂಸದರ ಕಚೇರಿ ಮೂಲಗಳು ತಿಳಿಸಿವೆ.
ದೇವೇಗೌಡರ ಜೊತೆ ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್.ಡಿ.ರೇವಣ್ಣ, ಪುಟ್ಟರಾಜು, ರಮೇಶ್ ಗೌಡ ಉಪಸ್ಥಿತರಿದ್ದರು.