ಹುಬ್ಬಳ್ಳಿ: ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿಯಮಗಳು ಇನ್ನೂ ಕೂಡಾ ಪರಿಪೂರ್ಣವಾಗಿ ಸಡಿಲಿಕೆಯಾಗಿಲ್ಲ. ಹಾಗಾಗಿ ಈ ಬಾರಿಯೂ ಸಾರ್ವಜನಿಕ ಗಣೇಶೋತ್ಸವ ಸಾಧ್ಯತೆಗಳು ಕಡಿಮೆ. ಸಾರ್ವಜನಿಕವಾಗಿ ಜನ ಸೇರುವ ಪ್ರಸಂಗಗಳಿಗೆ ಅವಕಾಶ ನೀಡದಿರುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದ್ದರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿವೆ.
ಬೆಂಬಲಕ್ಕೆ ನಿಂತ ನಳಿನ್ ಕುಮಾರ್ ಕಟೀಲ್..
ಈ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹಿಂದೂ ಸಂಘಟನೆಗಳ ಬೆಂಬಲಕ್ಕೆ ನಿಂತಿದ್ದಾರೆ. ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡುವುದು ಉತ್ತಮ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್, ಕೋವಿಡ್ ಇಳಿಕೆ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಜನರ ಭಾವನೆಗಳಿಗೆ ಸ್ಪಂದಿಸಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದು ಅಗತ್ಯ ಎಂದರು. ಜನರ ಭಾವನೆಗಳಿಗೆ ಸ್ಪಂದಿಸಬೇಕಾದ್ದು ಸರ್ಕಾರದ ಕರ್ತವ್ಯ ಎಂದ ಅವರು, ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಗಣೇಶೋತ್ಸವ ಆಚರಿಸಬೇಕು ಎನ್ನುವ ಕುರಿತು ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ಸೂಕ್ತ ನಿಯಮ ರೂಪಿಸಿ ಅವಕಾಶ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.