ಬೆಳಗಾವಿ: ವರ್ಷಗಳು ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನನ್ನು ವಾಪಸ್ ಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ಹಂಚಿಕೆಯಾಗಿ 5ರಿಂದ 20 ವರ್ಷ ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ ಭೂಮಿಯನ್ನು ವಾಪಸ್ ಪಡೆಯಲಾಗುವುದು. ಈಗಾಗಲೇ ಅಂಥವುಗಳನ್ನು ಗುರುತಿಸಲಾಗಿದೆ ಎಂದರು.
ಕಾರ್ಖಾನೆ ಪೂರ್ಣವಾಗಿ ಪ್ರಾರಂಭಿಸದಿದ್ದರೆ ಸೇಲ್ ಡೀಡ್ ಮಾಡಿಕೊಡುವುದಿಲ್ಲ. ಸೇಲ್ ಡೀಡ್ ಆಗದೆ ಅವರು ಕೈಗಾರಿಕಾ ಭೂಮಿಯನ್ನು ರಿಯಲ್ ಎಸ್ಟೇಟ್‍ಗೆ ಬಳಸಿಕೊಳ್ಳಲು ಅವಕಾಶವಿಲ್ಲ. ಕೈಗಾರಿಕೆಗೆ ಹಂಚಿಕೆಯಾದ ಜಮೀನಿನಲ್ಲಿ ಶೇ.15ರಷ್ಟು ವಸತಿಗೆ ಮೀಸಲಿಡಬೇಕು ಎಂದು ಹೇಳಿದರು.
ಡಾ.ಸರೋಜಿನಿ ಮಹಿಷಿ ವರದಿಯಂತೆ ನಮ್ಮ ಸರ್ಕಾರ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲು ಬದ್ದವಾಗಿದೆ ಎಂದೂ ಅವರು ತಿಳಿಸಿದರು. ಶಾಸಕ ಅಮೃತ್ ದೇಸಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಕೈಗಾರಿಕಾ ಪ್ರದೇಶಗಳಿಗಾಗಿ ಜಮೀನು ನೀಡಿದ ರೈತರಿಗೆ ಪರಿಹಾರ ನೀಡುವುದರ ಜೊತೆಗೆ ಅವರ ಕುಟುಂಬದ ಸದಸ್ಯರಿಗೆ ಜಮೀನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು. ಧಾರವಾಡ ಜಿಲ್ಲೆ ಬೇಲೂರು ಕೈಗಾರಿಕಾ ಪ್ರದೇಶಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿಗಾಗಿ ಒಟ್ಟು 1992.19 ಎಕರೆ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಬೇಲೂರಿನಲ್ಲಿ ಒಂದು ಎಕರೆಗೆ 12 ಸಾವಿರ ರೂ. ಮಮಿಘಟ್ಟಿಯಲ್ಲಿ 15 ಸಾವಿರ, ಗುಗ್ಗರಕಟ್ಟೆಯಲ್ಲಿ 18 ಸಾವಿರ ಪ್ರತಿ ಎಕರೆಗೆ ಪರಿಹಾರ ಕೊಡುತ್ತಿದ್ದೇವೆ. ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 1414 ಉದ್ಯೋಗಗಳನ್ನು ನೀಡಲಾಗಿದೆ. 1538 ಸ್ಥಳೀಯರಿಗೆ ಹಾಗೂ ಭೂಮಿ ಕಳೆದುಕೊಂಡ 76 ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ವಿವರಿಸಿದರು.