ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ತಂದೆ ತಿಮ್ಮೇಗೌಡ ಅವರ ನಿಧನಕ್ಕೆ ಮಠಾಧಿಪತಿಗಳು, ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು ಮಾಜಿ ಸಚಿವರಾದ ಸಿ.ಟಿ.ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.
ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಕೂಡಾ ಸಿ.ಟಿ.ರವಿ ಕುಟುಂಬದ ದುಃಖದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
ಪ್ರಧಾನಿ ಕಂಬನಿ:
ತಂದೆಯ ಅಗಲುವಿಕೆಯ ನೋವಿನಲ್ಲಿರುವ ಸಿ.ಟಿ.ರವಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇತರರ ನೋವಿನಲ್ಲಿ ಭಾಗಿಯಾಗುತ್ತಿರುವ ಜನಾನುರಾಗಿ ಸಿ.ಟಿ.ರವಿಯವರ ನೋವಿನಲ್ಲಿ ತಾವೂ ಭಾಗಿಯಾಗುವುದಾಗಿ ಅವರು ಹೇಳಿದ್ದಾರೆ. ರವಿ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡಾ ಕಂಬನಿ ಮಿಡಿದಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರೂ ಆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ಸಿ.ಟಿ.ರವಿ ಅವರ ತಂದೆ ವಿಧಿವಶರಾದ ಸುದ್ದಿ ತಿಳಿದು ನೋವು ಹಂಚಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೂ ಸಿ.ಟಿ.ರವಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಗೋವಾ ಚುನಾವಣಾ ಪ್ರಚಾರದಲ್ಲಿದ್ದ ಸಂದರ್ಭದಲ್ಲಿ ತಂದೆ ವಿಧಿವಶರಾದ ಸುದ್ದಿಯಿಂದ ದುಂಖಿತರಾದ ಸಿ.ಟಿ.ರವಿ ಅವರನ್ನು ಜೆ.ಪಿ.ನಡ್ಡಾ ಅವರು ಸಾಂತ್ವನ ಹೇಳಿದರು.
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ @CTRavi_BJP ಅವರ ತೀರ್ಥರೂಪರಾಗಿರುವ ಶ್ರೀ ತಿಮ್ಮೇಗೌಡ ಅವರು ಇಹಲೋಕ ತ್ಯಜಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಪಾರ ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/61MAipmXtJ
— Nalinkumar Kateel (@nalinkateel) January 29, 2022
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರೂ ಕಂಬನಿ ಮಿಡಿದಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಿ.ಟಿ.ರವಿ ಅವರನ್ನು ಸಂಪರ್ಕಿಸಿ ದುಃಖದಲ್ಲಿ ಭಾಗಿಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕಿಶನ್ ರೆಡ್ಡಿ, ಎಲ್ ಮುರುಗನ್ ಸಹಿತ ಕೇಂದ್ರ ಸಚಿವರು, ಗೋವಿಂದ ಕಾರಜೋಳ ಸಹಿತ ರಾಜ್ಯದ ಮಂತ್ರಿಗಳು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರನೇಕರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ಲಕ್ಷ್ಮಣ್ ಸವದಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೂಡಾ ಕಂಬನಿ ಮಿಡಿದಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಹಿತ ಶಾಸನಸಭೆಯ ಸಹೋದ್ಯೋಗಿಗಳೂ ರವಿ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.