ಬೆಂಗಳೂರು: 2022-23 ನೇ ಸಾಲಿನ ಕೇಂದ್ರ ಬಜೆಟ್ ಕುರಿತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದವರು ವಿಶ್ಲೇಷಿಸಿದ್ದಾರೆ.
ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದವರು ಹೇಳಿದ್ದಾರೆ.
ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದ ಅವರು, ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.