ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಮೂರನೇ ಡೋಸ್ ಪಡೆಯಲು ಸೂಚಿಸಲಾಗಿದೆ. ಆದರೆ ಇದನ್ನು ಹೆಚ್ಚಿನವರು ಪಾಲಿಸುತ್ತಿಲ್ಲ. ಇನ್ನೂ 29-30 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ ಎಂದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.