ಬೆಂಗಳೂರು: ಕರಾವಳಿ ಮಲೆನಾಡು ಸಹಿತ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ಸಂತ್ರಸ್ತರಿಗೆ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಸಂಬಂಧಪಟ್ಟ ಪ್ರಕೃತಿ ವಿಕೋಪ ತಂಡದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಉಸ್ತುವಾರಿ ಕಾರ್ಯದರ್ಶಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು ಸೂಚಿಸಲಾಗಿದೆ ಎಂದರು.
ಕರಾವಳಿ ಭಾಗದಲ್ಲಿ ಕಡಲು ಕೊರೆತ ಉಂಟಾಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಪರಿಶೀಲನೆ ಮಾಡಿ ಕೂಡಲೆ ಪರಿಹಾರ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇಂದೂ ಕೂಡ ಕೊಡಗು ಸೇರದಂತೆ ಸಂಬಂಧಿಸಿದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ನೀಡಲು ಎಲ್ಲಾ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದರು.


















































