ಬೆಂಗಳೂರು: ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗಿಳಿಸುವ ಹೈಕೋರ್ಟ್ ಆದೇಶ ರಾಜ್ಯ ಸರ್ಕಾರಕ್ಕೆ ಸಂಕಟದ ಪರಿಸ್ಥಿತಿಯನ್ನು ತಂದೊಡ್ಡಿದೆ.
ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಲೋಕಾಯುಕ್ತಕ್ಕೆ ಪರ್ಯಾಯವಾಗಿ ಸಿದ್ದರಾಮಯ್ಯ ಸರ್ಕಾರ ಎಸಿಬಿಯನ್ನು ಅಸ್ತಿತ್ವಕ್ಕೆ ತಂದಿದ್ದರು. ಇದಕ್ಕೆ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತಿರೋಧ ವ್ಯಕ್ತವಾಗಿತ್ತು.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಸಿಬಿಯನ್ನು ರದ್ದುಗೊಳಿಸುವುದಾಗಿ ಸಾರಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ಈ ಬಗ್ಗೆ ಮರೆತಿತ್ತು. ಇದೀಗ ಸರ್ಕಾರ ತೀರ್ಮಾನ ಕೈಗೊಳ್ಳುವ ಮುನ್ನವೇ ಹೈಕೋರ್ಟ್ ಈ ಬಗ್ಗೆ ಆದೇಶ ಪ್ರಕಟಿಸಿರುವುದು ಬಿಜೆಪಿಗೂ ಆಶ್ಚರ್ಯ ಎಂಬಂತಾಗಿದೆ. ಅಷ್ಟೇ ಅಲ್ಲ, ಸರ್ಕಾರಕ್ಕೆ ‘ಹೈ’ ಆದೇಶ ಪಾಲಿಸುವ ಅನಿವಾರ್ಯತೆಯ ಸನ್ನಿವೇಶ ಎದುರಾಗಿದೆ.
ಈ ನಡುವೆ, ಉಚ್ಛ ನ್ಯಾಯಾಲಯ ಎಸಿಬಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಪಡಿಸಿ ನೀಡಿರುವ ಮಾಹಿತಿ ಸಿಕ್ಕಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಡ್ಯ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಜಿ ಜೊತೆ ಚರ್ಚೆ ಮಾಡಿ ಮುಂದೇನು ಮಾಡಬೇಕೆಂದು ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.