ಹಾಸನ : ಅರಸೀಕೆರೆ ಸಮೀಪದ ಬಾಣಾವರ ಬಳಿ ಕಳೆದ ರಾತ್ರಿ ಹಾಲಿನ ಟ್ಯಾಂಕರ್, ಟಿಟಿ ವಾಹನ, ಕೆಎಸ್ ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ 9 ಜನರು ಧಾರುಣವಾಗಿ ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ, ಅತೀವ ದುಃಖ ಉಂಟು ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೃತರೆಲ್ಲರೂ ಧರ್ಮಸ್ಥಳ ಸೇರಿ ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೈವದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಇನ್ನು ಕೆಲ ಕಾಲವಷ್ಟೇ ಕ್ರಮಿಸಿದ್ದಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು. ಆದರೆ, ಅವರೆಲ್ಲರೂ ಅಪಘಾತದಲ್ಲಿ ಸಾವಿಗೆ ತುತ್ತಾಗಿದ್ದಾರೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಸರಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಹೆಚ್ಡಿಕೆ ಒತ್ತಾಯಿಸಿದ್ದಾರೆ.







































































