ಬೆಂಗಳೂರು: ಬಡವರಿಗೆ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಹಕಾರ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ತಿಪ್ಪಗೊಂಡನಹಳ್ಳಿಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದ ಸಚಿವರು, ಸರ್ವರಿಗೂ ಸೂರು ಒದಗಿಸುವುದು ಸರ್ಕಾರದ ಕನಸಾಗಿದೆ ಎಂದು ಹೇಳಿದರು.
ಈ ವೇಳೆ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ವೃದ್ಧಾಪ್ಯ ವೇತನ, ಪಿಂಚಣಿ, ಹಕ್ಕುಪತ್ರ ವಿತರಣೆ, ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.