ಬೆಂಗಳೂರು: ಏಪ್ರಿಲ್ 16ರಂದು ಕೋಲಾರದಲ್ಲಿ ರಾಹುಲ್ ಗಾಂಧಿ ಅವರ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಬೆಳಗಾವಿಗೆ ಬಂದು ನಮ್ಮ ಯುವನಿಧಿ ಯೋಜನೆ ಪ್ರಕಟಿಸಿ ಯುವ ಸಮುದಾಯಕ್ಕೆ ಸಂದೇಶ ರವಾನಿಸಿದ್ದರು. ರಾಹುಲ್ ಗಾಂಧಿ ಅವರಿಗೆ ಬಿಜೆಪಿಯವರು ಹೆದರಿ ಅವರ ಸಂಸತ್ತಿನ ಸದಸ್ಯತ್ವವನ್ನು ವಜಾಗೊಳಿಸಿದ್ದಾರೆ. ಒಂದು ಭಾಷಣದ ವಿಚಾರವಾಗಿ ಇದೇ ಮೊದಲ ಬಾರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ತೀರ್ಪು ಬಂದ 24 ಗಂಟೆಗಳಲ್ಲಿ ಅವರನ್ನು ಅನರ್ಹ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಯಾವುದೇ ಅರ್ಜಿ ಹಾಕದೇ, ನೋಟೀಸ್ ನೀಡದೇ, ಲೋಕಸಭೆ ಸ್ಪೀಕರ್ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು 7 ಲಕ್ಷಗಳ ಮತಗಳ ಅಂತರದಲ್ಲಿ ಗೆದ್ದ ನಾಯಕನ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಜಕಾರಣ ನಿಂತ ನೀರಲ್ಲ. ಎಲ್ಲವೂ ಪುನರಾವರ್ತನೆಯಾಗಲಿದೆ ಎಂದರು.
ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಭಾಷಣ ಮಾಡಬೇಕು ಎಂದು ಹೇಳಿದಾಗ ನಾವು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ರಾಹುಲ್ ಗಾಂಧಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಜೈ ಭಾರತ ಸತ್ಯಾಗ್ರಹ ಯಾತ್ರೆಯನ್ನು ಏ.16ರಂದು ಆಯೋಜಿಸಲು ತೀರ್ಮಾನಿಸಿದ್ದೇವೆ. ಅದೇ ದಿನ ಕೆಪಿಸಿಸಿ ನೂತನ ಕಟ್ಟಡ ಉದ್ಘಾಟನೆ ಮಾಡಲಾಗುವುದು ಎಂದ ಅವರು, ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ಪ್ರಕಟವಾದ ನಂತರ ಮೊದಲ ಸಾರ್ವಜನಿಕ ಸಭೆಯನ್ನು ಕೋಲಾರದಲ್ಲಿ ಹಮ್ಮಿಕೊಂಡಿದ್ದೇವೆ ಎಂದರು.