ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಹಾಗೂ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರಲ್ ಅಗಿದ್ದ ಪ್ರಭುಲಿಂಗ ನಾವಡಗಿ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು.
ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಎಜಿ ಆಯ್ಕೆ ಅಧಿಕಾರವನ್ನು ಸಿಎಂಗೆ ನೀಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರರೂ ಆಗಿರುವ ಶಶಿಕಿರಣ್ ಶೆಟ್ಟಿ ಹೈಕೋರ್ಟ್‌ನ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.























































