ಬೆಂಗಳೂರು: ಅನ್ನಭಾಗ್ಯ ಯೋಜನೆ ಮೂಲಕ ರಾಜ್ಯದ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ ಎಂದು ಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಹೋರಾಟದಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್, ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ ಎಂದರು.
ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದ ಡಿಕೆಶಿ, ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ ಎಂದರು.
ಯಡಿಯೂರಪ್ಪ ಅವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ. ಅದನ್ನು ಬಿಟ್ಟು ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ ಎಂದವರು ಹೇಳಿದರು.
























































