ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಆಘಾತ ತಂದಿದೆ. ಹಿರಿಯ ತಾರೆಯ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಲೀಲಾವತಿ ನಿಧನದ ಸುದ್ದಿ ನೋವುಂಟುಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ ಎಂದು ನೆನಪಿಸಿರುವ ಸಿಎಂ ಸಿದ್ದರಾಮಯ್ಯ, ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ ಎಂದು ನೋವು ಹಂಚಿಕೊಂಡಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.







































































