ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳಿಂದ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ವಿದ್ಯಾರ್ಥಿಗಳನ್ನು ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ಈ ಹೊಣೆಗಾರಿಕೆ ಮರೆತು ವಿದ್ಯಾರ್ಥಿಗಳನ್ನು ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಸರೆಯಿಯಲ್ಲ ಎಂದಿರುವ ಶಿಕ್ಷಣ ಇಲಾಖೆ, ಸರ್ಕಾರಿ ಮಾತ್ರವಲ್ಲದೇ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ಜರುಗಬಾರದು ಎಂದು ಕಟ್ಟೆಚ್ಚರ ನೀಡಿದೆ.
ಅನುದಾನಹಣವನ್ನು ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿರುವ ಇಲಾಖೆ, ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.






















































