ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಲ್ಲೀನರಾಗಿದ್ದ ಬಿಜೆಪಿ ನಾಯಕರು ಇದೀಗ ಲೋಕಸಭಾ ಚುನಾವಣಾ ತಯಾರಿಯತ್ತ ಮುಖ ಮಾಡಿದ್ದಾರೆ. ಚುನಾವಣಾ ತಂತ್ರಗಾರಿಕೆ ಸಂಬಂಧ ಈ ತಿಂಗಳ 27ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ಮುಖಂಡರು ತೀರ್ಮಾನಿಸಿದ್ದಾರೆ.
ಜನವರಿ 19 ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಲಾಗಿತ್ತಾದರೂ ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿತ್ತು. ಈ ಸಭೆಯನ್ನು ಜನವರಿ 27 ರಂದು ಕೇಂದ್ರ ನಾಯಕರ ಉಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಿಎಂ ಯಡಿಯೂರಪ್ಪ, ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಕಟ ಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


























































