.ಮಂಗಳೂರು: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ ಕರ್ನಾಟಕದ ಹಲವೆಡೆ ಹೋರಾಟ ನಡೆಸಿದೆ. ಅದರಲ್ಲೂ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ NSUI ದಕ್ಷಿಣ ಕನ್ನಡ ಘಟಕದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ ಕೋಲಾಹಲ ಸೃಷ್ಟಿಸಿದರು.
ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಸಂಸದರ ನಿವಾಸಕ್ಕೆ ಲಗ್ಗೆ ಹಾಕಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ತಡೆದರು. ಪ್ರತಿಭಟನೆ ನಡೆಸುತ್ತಿದ್ದ ಯುವ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು.
ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಾಷ್ಟ್ರಮಟ್ಟದಲ್ಲಿ ಉತ್ತಮ ಸಂಸದನೆಂಬ ಹೆಸರು ಪಡೆದಿರುವವರು, ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಕಾಲೇಜುಗಳಿವೆ, ಆದರೆ ಸಂಸದರಿಂದ ಉದ್ಯೋಗ ಸೃಷ್ಟಿ ಮಾಡಲಾಗಿಲ್ ಎಂದು ವಾಗ್ದಾಳಿ ನಡೆಸಿದ ವೇಳೆ ವಿದ್ಯಾರ್ಥಿ ಮುಖಂಡರು, ರಾಜ್ಯ ಸರ್ಕಾರದ ತೆರಿಗೆ ಹಣವನ್ನು ಕೇಂದ್ರದ ವಾಪಸ್ಸು ಕೊಡಿಸುವುದೂ ಇವರಿಗೆ ಸಾಧ್ಯವಾಗುತ್ತಿಲ್ಲ, ಇಂಥ ಸಂಸದರು ನಮಗೆ ಬೇಕಿಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿದರು.













































































