ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿ ಭರ್ಜರಿ ಪರಿವರ್ತನೆಗೆ ಮುನ್ನುಡಿ ಬರೆದಿರುವ ರಾಜ್ಯ ಸರ್ಕಾರ ಇದೀಗ ವಿವಿಧ ದೇವಾಲಯಗಳ ಪ್ರಾಧಿಕಾರ ಸ್ಥಾಪನೆಗೆ ನಿರ್ಧರಿಸಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಪ್ರಯತ್ನಕ್ಕೆ ಇದೀಗ ರಾಜ್ಯ ಸಂಪುಟವೂ ಅಸ್ತು ನೀಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಮೈಸೂರು ಚಾಮುಂಡೇಶ್ವರಿ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಕೊಪ್ಪಳ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿ ದೇವಸ್ಥಾನ, ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಬೇಕೆಂಬ ಬೇಡಿಕೆ ಬಹುಕಾಲದ್ದಾಗಿದೆ. ಈ ಸಂಬಂಧ ಸರ್ಕಾರ ತ್ವರಿತ ಕ್ರಮ ಕೈಗೊಂಡು ಇದೀಗ ಪ್ರಧಿಕಾರ ಅಸ್ತಿತ್ವಕ್ಕೆ ತರಲು ವೇದಿಕೆ ರೂಪಿಸಲಾಗಿದೆ ಎಂದು ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಇದೇ ವೇಳೆ, ಉತ್ತರ ಕರ್ನಾಟಕದ ಪ್ರಮುಖ ಕ್ಷೇತ್ರವಾಗಿರುವ ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೂ ಪ್ರತ್ಯೇಕ ಪ್ರಾಧಿಕಾರ ರಚಿಸಲು ಸಂಪುಟ ಅಸ್ತು ಎಂದಿದೆ. ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಸಿದ್ದ ದೇವಾಲಯ ‘ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇಗುಲ’ ಅಭಿವೃದ್ಧಿಗೂ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಾರಿಗೆ ಸಚಿವರೂ ಆದ ರಾಮಲಿಂಗ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದೇ ವೇಳೆ, ಎ ಮತ್ತು ಬಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವ ಕರ್ಮ ಸಮಾಜದವರಿಗೆ ಒಂದು ಸ್ಥಾನ ಮೀಸಲು ಕಲ್ಪಿಸುವ ಮಹತ್ವದ ನಿರ್ದಾರವನ್ನೂ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.






















































