ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಶಿ (ವಾರಣಾಸಿ) ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದು ಪೂಜ್ಯ ಕ್ಷೇತ್ರದಿಂದ ಪ್ರಧಾನಿ ಮೋದಿಯವರ ಮೂರನೇ ಉಮೇದುವಾರಿಕೆಯನ್ನು ಸೂಚಿಸುತ್ತದೆ ಎಂದವರು ಹೇಳಿದ್ದಾರೆ.
ಬಿಜೆಪಿಯ 195 ಅಭ್ಯರ್ಥಿಗಳ ಆರಂಭಿಕ ಪಟ್ಟಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ ನಂತರ, ಪಿಎಂ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದು, “ಸತತ ಮೂರನೇ ಅವಧಿಗೆ ಕಾಶಿಯ ಜನರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ನಾನು ಕುತೂಹಲದಿಂದ ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದಾರೆ.
ಲಕ್ಷಾಂತರ ಕಾರ್ಯಕರ್ತರ ಅವಿರತ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಮೋದಿ, ತಮಗೆ ಮತ್ತೊಮ್ಮೆ ಜವಾಬ್ದಾರಿ ವಹಿಸಿದ್ದಕ್ಕಾಗಿ ಪಕ್ಷದ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.




























































