ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಸಚಿವ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಘೋಷಿಸಿದ್ದಾರೆ. .
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಆಕ್ರೋಶಗೊಂಡಿರುವ ಕೆ.ಎಸ್.ಈಶ್ವರಪ್ಪ ಇಂದು ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದರು.
ಪಕ್ಷವು ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ ಈಶ್ವರಪ್ಪ, ನನ್ನಿಂದಲೇ ಎನ್ನುವವರ ವಿರುದ್ಧ ಚುನಾವಣಾ ಕಣಕ್ಕೆ ಇಳಿಯುತ್ತಿದ್ದೇನೆ. ಪಕ್ಷದ ಸಿದ್ಧಾಂತ ಪರವಿರುವ ನನ್ನನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಗೆದ್ದರೆ ಮೋದಿಯನ್ನೇ ಬೆಂಬಲಿಸುತ್ತೇನೆ. ಪ್ರಾಣ ಹೋದರೂ ನಾನು ನರೇಂದ್ರ ಮೋದಿ ವಿರುದ್ಧ ಹೋಗುವುದಿಲ್ಲ. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಶ್ರಮಿಸೋಣ ಎಂದವರು ಹೇಳಿದರು.