ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂಬ ಮಾತುಗಳು ಹರಿದಾಡುತ್ತಿವೆ.
ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರ ಕಾರ್ಯ ಆರಂಭಿಸಿದ್ದರೂ ಕಾಂಗ್ರೆಸ್ ಪಕ್ಷ ಈಗಿನ್ನೂ ಅಭ್ಯರ್ಥಿಯ ಆಯ್ಕೆ ಕಸರತ್ತನ್ನು ಪರಿಪೂರ್ಣಗೊಳಿಸಿಲ್ಲ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಕಣಕ್ಕಿಳಿಸಬೇಕೆಂದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ. ಯದುವೀರ್ ಎದುರು ಯತೀಂದ್ರ ಮಾತ್ರ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಹಲವು ಕಾಂಗ್ರೆಸ್ ನಾಯಕರ ಅಭಿಪ್ರಾಯ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಆದರೂ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವು ಯತೀಂದ್ರ ಅವರನ್ನೇ ಕಣಕ್ಕಿಳಿಸಿದರೂ ಅಚ್ಚರಿಯಿಲ್ಲ.