ಬೆಂಗಳೂರು: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ KSTC ನಿಗಮದ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿ ಕಲ್ಪಿಸಲಾಗಿದೆ. .
ಕನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರ ಪತ್ರಕ್ಕೆ ಸ್ಪಂಧಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25.03.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಮನವಿ ಮಾಡಿದ್ದರು. ಅದರನ್ವಯ ಕ.ರಾ.ರ.ಸಾ. ನಿಗಮವು, ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ 25.03.2024ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಈ ಸಂಬಂಧ. ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಚಾಲನಾ ಸಿಬ್ಬಂದಿಗೆ ನಿರ್ದೇಶನಗಳನ್ನು ನೀಡುವಂತೆ ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಅಧಿಕಾರಿಗೆ ನಿಗಮದ ಕೇಂದ್ರ ಕಚೇರಿಯಿಂದ ಸೂಚನೆ ರವಾನೆಯಾಗಿದೆ.