ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಹದ್ದೊನ ಕನ್ನಿಟ್ಟಿರುವ ಪೊಲೀಸ್, ಅಬಕಾರಿ ಇಲಾಖೆ ಹಾಗೂ ಚುನಾವಣಾ ಆಯೋಗ ಕ್ಷಿಪ್ರ ಕಾರ್ಯಾಚರಣೆಗಿಳಿದಿವೆ. ಇದೇ ಸಂದರ್ಭದಲ್ಲಿ ಅಬಕಾರಿ ಅಧಿಕಾರಿಗಳು ಬೆಳ್ತಂಗಡಿ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಮದ್ಯ ಅಕ್ರಮ ದಾಸ್ತಾನು ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬಂದಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಮದ್ಯವನ್ನೂ ಜಪ್ತಿ ಮಾಡಿದ್ದಾರೆ.
ಬೆಳ್ತಂಗಡಿ ಸಮೀಪದ ಬೆಳಾಲು ಗ್ರಾಮದ ಮೆನ್ಸ್ ಪಾರ್ಲರ್‌ನ ಹಿಂಭಾಗದ ಗೋದಾಮಿನಲ್ಲಿ ಮದ್ಯ ಸಂಗ್ರಹಿಸಿಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಯತ್ನ ನಡೆದಿತ್ತು ಎನ್ನಲಾಗಿದೆ. ಶುಕ್ರವಾರ ಸಂಜೆ ಈ ಕಾರ್ಯಾಚರಣೆ ನಡೆದಿದ್ದು, ಸುಮಾರು 67.950 ಲೀಟರ್ ಅಕ್ರಮ ಮದ್ಯ ಮತ್ತು 68.680 ಲೀಟರ್ ಬಿಯರ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
















































