ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರನ್ನು ಗೆಲ್ಲಿಸಲು ಸ್ವತಃ ಪ್ರಧಾನಿ ಮೋದಿಯವರೇ ಅಖಾಡಕ್ಕಿಳಿಯಲಿದ್ದಾರೆ. ಈ ತಿಂಗಳ 14ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿಯವರು ಪಾಲ್ಗೊಳ್ಳುವ ಕಾರ್ಯಕ್ರಮ ಇತ್ತು. ಆದರೆ ಇದೀಗ ಮೋದಿ ಕಾರ್ಯಕ್ರಮ ಮಂಗಳೂರಿಗೆ ಸ್ಥಳಾಂತರಗೊಂಡಿದೆ.
ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಮೋದಿ ಅಂದು ಸಂಜೆ 6 ಗಂಟೆ ಸುಮಾರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

























































