ಬೆಂಗಳೂರು: “ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. .
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ಕುರಿತು ಕುಮಾರಸ್ವಾಮಿ ಅವರು ಟೀಕೆ ಮಾಡಿರುವ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಯಾರನ್ನ ಟೀಕೆ ಮಾಡಿಲ್ಲ ಹೇಳಿ. ಪ್ರಣಾಳಿಕೆ ಬಿಡಿ, ಕುಮಾರಸ್ವಾಮಿ ಅವರು ನಮ್ಮ ಪ್ರತಿ ವಿಚಾರವನ್ನು ಟೀಕೆ ಮಾಡುತ್ತಾರೆ. ಮೇಕೆದಾಟು ಪಾದಯಾತ್ರೆ ಟೀಕೆ ಮಾಡಿದ್ದವರು ಈಗ ಮೇಕೆದಾಟು ಯೋಜನೆ ಜಾರಿಗೆ ಶಪಥ ಮಾಡುವುದಾಗಿ ಹೇಳಿದ್ದಾರೆ. ಮಠದ ಸ್ವಾಮೀಗಳನ್ನು ಬಿಟ್ಟಿಲ್ಲ. ಎರಡು ಮಠ ಮಾಡಿದ್ದಾರೆ. ಈಗ ದಿನಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡುತ್ತಾರೆ. ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಯಡಿಯೂರಪ್ಪನವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಕುಮಾರಸ್ವಾಮಿ ಬಗ್ಗೆ ಯಡಿಯೂರಪ್ಪ ಮತ್ತು ಯಡಿಯೂರಪ್ಪ ಅವರ ಬಗ್ಗೆ ದೇವೇಗೌಡ ಅವರು ಮಾತನಾಡಿದ್ದನ್ನು ನಾವು ನೋಡಿದ್ದೇವೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದಾಗ ಇದೇ ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಅಶೋಕ್ ಅವರೇ ಸರ್ಕಾರ ಕೆಡವಿದರು. ಕುಮಾರಸ್ವಾಮಿಯವರು ಈಗ ಅವರ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಸರ್ಕಾರ ಕೆಡವಿದವರು ಅವರು. ಆದರೆ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
ಒಕ್ಕಲಿಗರ ಸ್ವಾಮೀಜಿಗಳನ್ನು ಭೇಟಿ ಮಾಡಿದರೆ ಸಮುದಾಯದ ಮತಗಳು ವಿಭಜನೆ ಆಗುತ್ತವೆಯೇ ಎಂದು ಕೇಳಿದಾಗ, “ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ. ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಸಿಎಂ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ? ಎಂದು ಡಿಕೆಶಿ ಹೇಳಿದರು.
ವಿಧಾನಸಭೆಯಲ್ಲಿ ದೇವೇಗೌಡರು, ಕುಮಾರಸ್ವಾಮಿಯವರ ಬಗ್ಗೆ ಯಡಿಯೂರಪ್ಪ ಅವರು ಏನು ಹೇಳಿದರು ಗೊತ್ತಿದೆಯೇ?. ಯಾವೂದನ್ನು ಮುಚ್ಚಿಡಲು ಸಾಧ್ಯವಿಲ್ಲವಲ್ಲ. ಎಂತೆಂಥಾ ಪದಗಳನ್ನು ಉಪಯೋಗಿಸಿದರು. ನಾನು ಎಂದಿಗೂ ಅವರು ಬಳಸಿರುವ ಪದಗಳನ್ನು ಬಳಸಿಲ್ಲ ಎಂದ ಡಿಕೆಶಿ, ಎಂಟು ಮಂದಿ ಒಕ್ಕಲಿಗರಿಗೆ ಲೋಕಸಭಾ ಟಿಕೆಟ್ ನೀಡಿದ್ದೇವೆ. ನಾನು ಡಿಸಿಎಂ ಮತ್ತು ಪಕ್ಷದ ಅಧ್ಯಕ್ಷನಾಗಿದ್ದೇನೆ. ನಾವೆಲ್ಲಾ ಸಮಾಜದ ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಲು ತಯಾರಿದ್ದೇವೆ. ಭವಿಷ್ಯದ ಬಗೆಗಿನ ಮಾತುಗಳು ನಮಗೆ ಏಕೆ? ನಮ್ಮ ಸಮಾಜದವರು ದಡ್ಡರಲ್ಲ.ಎಂದರು.
ಒಕ್ಕಲಿಗ ನಾಯಕರನ್ನು ಒಗ್ಗೂಡಿಸುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಎಲ್ಲರೂ ಅವರವರ ಬದುಕು ನೋಡಿಕೊಳ್ಳುತ್ತಾರೆ. ನಾವು ಈಗಾಗಲೇ ಅಧಿಕಾರದಲ್ಲಿದ್ದೇವೆ. ಅದಾದ ನಂತರ ಮುಂದಿನ ಐದು ವರ್ಷವೂ ನಾವೇ ಇರುತ್ತೇವೆ. ಮುಂದೆ ನಾವು ಗೆಲ್ಲುವುದಿಲ್ಲ ಎಂದು ಈ ರೀತಿ ಹೇಳುತ್ತಿದ್ದಾರೆ. ನಮ್ಮಿಂದಾಗಿ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಿದ್ಧಾಂತವನ್ನೇ ಕುಮಾರಸ್ವಾಮಿ ಅವರು ಮಾರಿಕೊಂಡಿದ್ದಾರೆ. ಕುಮಾರಸ್ವಾಮಿ ಅವರ ವಿಚಾರ ಬಿಡಿ. ಆದರೆ ದೇವೇಗೌಡರಿಗೆ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸುವ ಪರಿಸ್ಥಿತಿ ಬರಬಾರದಿತ್ತು. ಅವರ ಸ್ಥಿತಿ ನೋಡಿ ಬೇಸರವಾಗುತ್ತದೆ” ಎಂದರು.
ಮೈತ್ರಿ ಸರ್ಕಾರ ಬೀಳಿಸಿದವರು ಬಿಜೆಪಿಯಲ್ಲ ಕಾಂಗ್ರೆಸಿಗರು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ವಿಶ್ವನಾಥ್, ನಾರಾಯಣ ಗೌಡರನ್ನು ಭೇಟಿ ಮಾಡಿದ್ದಾರೆ. ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಯಡಿಯೂರಪ್ಪ ಅವರನ್ನು ತಬ್ಬಾಡುತ್ತಿದ್ದಾರೆ. ಜನಕ್ಕೆ ಇದಕ್ಕಿಂತ ಸಾಕ್ಷಿ ಬೇರೇನು ಬೇಕು? ಕುಮಾರಸ್ವಾಮಿ ಅವರು ಆಗ ಏನು ಮಾತನಾಡಿದ್ದರು?” ಎಂದು ಕೇಳಿದರು.
ಮೇಕೆದಾಟು ಪಾದಯಾತ್ರೆ ವೇಳೆ ನಾನು ತೂರಾಡಿದ್ದೇನೆಯೇ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, “ಅವರು ಏನಾದರೂ ಹೇಳಿಕೊಳ್ಳಲಿ. ಜನಕ್ಕೆ ಎಲ್ಲವೂ ಗೊತ್ತಿದೆ. ನಾನು ಪಾದಯಾತ್ರೆ ಮಾಡಿದ್ದೇನೆ ತಾನೆ, ಅವರು ಮಾಡಲಿ. ನಾನು ಕುಡಿದು ತೂರಾಡಿದ್ದೇನೆಯೇ? ನಾನು ಪಾದಯಾತ್ರೆಯಲ್ಲಿ ನಡೆದು ಸುಸ್ತಾಗಿ ತೂರಾಡಿದ್ದೇನೆ. ಕುಮಾರಸ್ವಾಮಿ ಅವರು ಅಲ್ಲಿ ನಡೆದಿದ್ದರೆ ಅವರಿಗೆ ಗೊತ್ತಾಗುತ್ತಿತ್ತು. ಈ ನಾಡು, ಕಾವೇರಿ ಜಲಾನಯನ ಪ್ರದೇಶದ ಜನರಿಗಾಗಿ ಈ ಹೋರಾಟ ಮಾಡಿದ್ದೇನೆ. ನಾನು ಈ ವಿಚಾರದಲ್ಲಿ ಅವರಿಗೆ ಸವಾಲು ಹಾಕುವುದಿಲ್ಲ. ನಾನು ಸವಾಲು ಹಾಕಿ ಅವರ ಆರೋಗ್ಯ ಹೆಚ್ಚುಕಮ್ಮಿ ಆದರೆ ನಾನು ಜವಾಬ್ದಾರಿ ತೆಗುಕೊಳ್ಳುವುದಿಲ್ಲ. ಅವರು ಧೈರ್ಯವಾಗಿ ಚುನಾವಣೆ ಮಾಡುತ್ತಿದ್ದಾರೆ ಅದಕ್ಕೆ ಶುಭ ಕೋರುತ್ತೇನೆ ಎಂದರು.