ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ಗೆಲ್ಲಲು ರಣವ್ಯೂಹ ರೂಪಿಸಿರುವ ಬಿಜೆಪಿ ಇದೀಗ ಪ್ರಧಾನಿ ನರೇಂದ್ರ ಮೋದಿ, ಅಮಿಶ್ ಶಾ, ಜೆ.ಪಿ.ನಡ್ಡಾ, ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರನ್ನು ಕರೆತರಲು ತಯಾರಿ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದು, ಮತ್ತೊಮ್ಮ ಪ್ರಚಾರಕ್ಕೆ ಬರಲಿದ್ದಾರೆ. ಏಪ್ರಿಲ್ 20ರಂದು ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರ್ಯಾಲಿ ನಡೆಸಲಿದ್ದಾರೆ.
- ಏಪ್ರಿಲ್ 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ.
- ಏಪ್ರಿಲ್ 23, 24ರಂದು ಬಿಜೆಪಿಯ ಚಾಣಕ್ಯ ಅಮಿತ್ ಶಾ ಅವರು ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 23ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ, ಯಶವಂತಪುರ, ಯಲಹಂಕ, ಮಹದೇವಪುರದಲ್ಲಿ ಮತಯಾಚಿಸಲಿದ್ದಾರೆ. ಮರುದಿನ (ಏಪ್ರಿಲ್ 24) ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭ, ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಾಗೂ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
- ಏಪ್ರಿಲ್ 24ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆಗಮಿಸಲಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ರೋಡ್ಶೋ ನಡೆಸಲಿದ್ದಾರೆ. ಮಡಿಕೇರಿ, ಉಡುಪಿಯಲ್ಲೂ ಸಾರ್ವಜನಿಕ ಸಭೆಯಲ್ಲಿ ಯೋಗಿ ಭಾಗಿಯಾಗಲಿದ್ದಾರೆ.
- ಏಪ್ರಿಲ್ 24 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ.