ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿದೆ. ತನಿಖೆಯಲ್ಲಿ ಆರೋಪ ಸಾಬೀತಾದರೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ನಾಯಕರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡಿದೆ.
ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಚರ್ಚೆ ನಡೆದಿದೆ. ಪಕ್ಷದ ವರ್ಚಸ್ಸಿಗೆ ಈ ಪ್ರಕರಣದಿಂದ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಔಚಿತ್ಯದ ಬಗ್ಗೆ ನಾಯಕರು ಪ್ರಸ್ತಾಪಿಸಿದ್ದಾರೆ. ನಾಯಕರ ಸಲಹೆಯಂತೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರವನ್ನು ಜಿ.ಟಿ.ದೇವೇಗೌಡರು ಪ್ರಕಟಿಸಿದರು.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ನಿರ್ಧಾರದಂತೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಆರೋಪ ಸಾಬೀತಾದರೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ತಿಳಿಸಿದರು.