ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪಲಾಯನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ವಾಗ್ದಾಳಿ ನಡೆಯುತ್ತಿದ್ದು, ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಹಾರಿದ್ದಾರೆ. ಅವರ ಪಾಸ್ಪೋರ್ಟ್ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಧಾನಿಯವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು.
ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ ಎಂದ ಅಶೋಕ್, ಸಿಎಂ ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.