ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹತ್ಯಾಕಾಂಡ ನಡೆದಿದೆ. ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಕೃತ್ಯ ನಡೆದಿದ್ದು, ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವ @ ಗಿರೀಶ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಯನ್ನು ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಯತ್ನಿಸುತ್ತಿದ್ದಂತೆಯೇ ಆತ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ನೇಹಾ ಮಾದರಿಯಲ್ಲಿ ನಿನ್ನನ್ನೂ ಹತ್ಯೆ ಮಾಡುವುದಾಗಿ ವಿಶ್ವ ಕೆಲವು ದಿನಗಳ ಹಿಂದೆ ಈ ಯುವತಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಬೆಂಡಿಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


























































