ಬೆಂಗಳೂರು: ಮಳೆ ಬಂದಾಗ.. ಬಸ್ಸಿನಲ್ಲಿ ನೀರು ಸೋರುತ್ತಿದ್ದರೆ..? ಅಂತಹಾ ಪರಿಸ್ಥಿತಿ ಹೇಗಿರಬೇಕು? ಪರಿಸ್ಥಿತಿ ಹಾಗಿರದಿದ್ದರೂ ಮೋಜಿಗಾಗಿ ಚಾಲಕ ಸೃಷ್ಟಿಸಿದ ಸನ್ನಿವೇಶ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ಅವಾಂತರವನ್ನು ಸಹಿಸದ NWKRTC ನಿಗಮವು ಚಾಲಕನನ್ನು ಸೇವೆಯಿಂದ ಅಮಾನತು ಮಾಡಿದೆ.
ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಸ್ಪಷ್ಟೀಕರಣ ನೀಡಿರುವ NWKRTC ನಿಗಮ, ಚಾಲಕನ ವಿರುದ್ದ ಶಿಸ್ತು ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಈ ವಿಷಯವಾಗಿ ಧಾರವಾಡ ಗ್ರಾಮಾಂತರ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಅದರನ್ವಯ, ದಿನಾಂಕ: 23-05-2024ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203D ಹಾಗೂ ನಿರ್ವಾಹಕರಾಗಿ ಅನಿತಾ ಎಚ್. ಬಿ ಸಂ-396ರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.
ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿದುಬಂದಿರುತ್ತದೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಈ ಕುರಿತು ಸದರಿ ಚಾಲನಾ ಸಿಬ್ಬಂದಿಗಳಿಂದ ಸ್ಪಷ್ಟೀಕರಣ ಪಡೆಯಲಾಗಿ ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು NWKRTC ಸ್ಪಷ್ಟನೆ ನೀಡಿದೆ







































































