ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯನವರೇ ಮೊದಲ ಆರೋಪಿ ಎಂದಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಸ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಾದಿಸಿದರು.
ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನರೇಂದ್ರ ಮೋದಿಯವರು ಹಿಂದುಳಿದ ವರ್ಗದ ನಾಯಕರಾಗಿದ್ದು, ಸಚಿವ ಸಂಪುಟದಲ್ಲಿ ಎಲ್ಲ ಜಾತಿ ವರ್ಗಕ್ಕೆ ಸ್ಥಾನಮಾನ ನೀಡಿದ್ದಾರೆ. ಕರ್ನಾಟಕದ ಸಂಸದರಿಗೂ ಅವಕಾಶ ನೀಡಿರುವುದು ಅಭಿನಂದನೀಯ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಲ್ಲಿಗೆ ಹೆಚ್ಚು ಅವಕಾಶ ನೀಡಿದ್ದಾರೆ ಎಂದರು.