ಮೈಸೂರು: ಸ್ಯಾಂಡಲ್ ವುಡ್ ನಟ ದರ್ಶನ್ ಮತ್ತೊಮ್ಮೆ ಜೈಲುಪಾಲಾಗಿದ್ದಾರೆ. ಗೆಳತಿಗೆ ಮಾನಸಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ.. ನಟ ದರ್ಶನ್ ಬಂಧನ ಬಗ್ಗೆ ಕಮೀಷನರ್ ಬಿ.ದಯಾನಂದ್ ಹೇಳಿದ್ದು ಹೀಗೆ..
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.
ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂದು ಹೇಳಲಾಗುತ್ತಿದ್ದು, ಇದರಿಂದ ಕುಪಿತರಾದ ನಟ ದರ್ಶನ್ ತಮ್ಮ ಸಹಚರರ ಮೂಲಕ ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಕೊಲೆಯಾಗಿದ್ದು, ಭಾನುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೆಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆ ಸಂದರ್ಭದಲ್ಲಿ ದರ್ಶನ್ ಅವರ ಸೂಚನೆಯಂತೆ ಕೊಲೆ ಮಾಡಿದ್ದಾಗಿ ಆರೋಪಿಗಳು ಹೇಳಿದ್ದಾರೆ ಎನ್ನಲಾಗಿದೆ. ಈ ಸುಳಿವು ಆಧರಿಸಿ ಪೊಲೀಸರು ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.