ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಇದೀಗ 18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ನರೇಂದ್ರ ಮೋದಿ ಸರ್ಕಾರ ಬಹುಮತ ಸಾಬೀತುಪಡಿಸಬೇಕಿರುವ ಹಿನ್ನೆಲೆಯಲ್ಲಿ ಈ ಅಧಿವೇಶನಕ್ಕೆ ಹೆಚ್ಚಿನ ಮಹತ್ವ ಬಂದಿದೆ.
ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಸಹಿತ 72 ಮಂದಿ ಸಂಸದರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಎಲ್ಲಾ ಸಂಸದರೂ ಪ್ರಮಾಣವಚನ ಸ್ವೀಕರಿಸಬೇಕಿದೆ. ಇದಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜತೆಗೆ ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.
ಮೊದಲ ಮೂರು ದಿನ ಸಂಸದರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ, ರಾಜ್ಯಸಭೆಯ 264 ನೇ ಅಧಿವೇಶನವೂ ಜೂನ್ 27ರಿಂದ ಜುಲೈ 3ರವರೆಗೆ ನಡೆಯಲಿದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ