ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.
ನೂತನ ಪ್ರತಿಪಕ್ಷ ನಾಯಕರನ್ನು ಅಭಿನಂಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವರಿಷ್ಠರು ಗುರುತಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ ಎಂದವರು ಬಣ್ಣಿಸಿದ್ದಾರೆ.







































































