ಬೆಂಗಳೂರು: ಪೂರ್ವ ಕರಾವಳಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕೆಲವೆಡೆ ಗಂಟೆಗೆ 90 ಕಿಮೀ ವೇಗದಲ್ಲಿ ಬಿರುಸಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಂದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.