ಬೆಳಗಾವಿ: ಮಹಾತ್ಮ ಗಾಂಧಿ ಆಧರಿಸಿ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧಿವೇಶನದ ದಿನವೇ ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ ಸ್ವತಂತ್ರ್ಯ ಸಿಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ಹೆಡಗೆವಾರ್, ಸಾವರ್ಕರ್ ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆ ಇಲ್ಲದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ ಎಂದ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.