ಬೆಳಗಾವಿ: ಮಾಜಿ ಸಚಿವ, ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದರೆಂಬ ಆರೋಪ ಹಿನ್ನೆಲೆಯಲ್ಲಿ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಹಿರೇಬಾಗೇವಾಡಿ ಪೊಲೀಸರು ಸುವರ್ಣ ಸೌಧಕ್ಕೆ ಧಾವಿಸಿ ಬಲವಂತಾಗಿಯೇ ಎತ್ತಿಕೊಂಡು ಹೋಗಿ ವಾಹನದಲ್ಲಿ ಕೂರಿಸಿಕೊಂಡು ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹಿರೇಬಾಗೇವಾಡಿ ಪೊಲೀಸ್ ಠಾಣೆಯು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಅದಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಮೇಲೆ ಹಲ್ಲೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಆಗಮಿಸುವ ಆತಂಕದ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆಯಲ್ಲಿನ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. ಆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಆ ವೇಳೆ ತಮ್ಮ ವಿರುದ್ಧ ಸಿ.ಟಿ.ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸರಿಗೂ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ.