ಬೆಳಗಾವಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದುಗೊಂಡಿದೆ.
ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಶತಮಾನೋತ್ಸವ ಸಮಾರಂಭ ‘ಗಾಂಧಿ ಭಾರತ’ ವನ್ನೂ ಮೊಟಕುಗೊಳಿಸಲಾಗಿದೆ.
1924 ರಲ್ಲಿ ಗಾಂಧಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದರ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ಡಿಸೆಂಬರ್ 26, 27 ರಂದು ‘ಗಾಂಧಿ ಭಾರತ’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಹಿತ ಹೈಕಮಾಂಡ್ ನಾಯಕರನೇಕರು ಬೆಳಗಾವಿಗೆ ಆಗಮಿಸಿದ್ದರು.
ಆದರೆ, ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಙತೆಯೇ ಈ ನಾಯಕರು ದೆಹಲಿಗೆ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ಶೋಕಾಚರಣೆ ಘೋಷಿಸಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.