ಬೆಂಗಳೂರು: ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿರುವ ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದಲ್ಲಿ ನಟಿ ರನ್ಯಾ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಟಿ ರನ್ಯಾ ಅವರು ವಿಮಾನ ನಿಲ್ದಾಣದಲ್ಲಿ ತಂದೆಯ ಹೆಸರು ಬಳಸಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಬಗ್ಗೆ ಈ ತನಿಖೆ ನಡೆಯಲಿದೆ. ಇದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ತನಿಖಾ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ.