ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ ಕಳಪೆ ಸಾಧನೆ ತೋರುತ್ತಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ಇದರ ಜವಾಬ್ದಾರಿ ಪಡೆದುಕೊಂಡು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಯೋಚಿಸಿ ಸುವ್ಯವಸ್ಥಿತ ಕಾರ್ಯದ ಯೋಜನೆ ಎಂದು ಸಚಿವರು ತಿಳಿಸಿದರು.
ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಪ್ರತಿ ಹಳ್ಳಿಗೆ ಒಬ್ಬರಂತೆ ಮತ್ತು ತಾಲೂಕುಮಟ್ಟದ ಅಧಿಕಾರಿಗಳನ್ನು ಪ್ರತಿ ಶಾಲೆಗೆ ಒಬ್ಬರಂತೆ ನೊಡಲ್ ಅಧಿಕಾರಿಗಳಾಗಿ ನೇಮಿಸಿ ಕಾರ್ಯಹಂಚಿಕೆ ಮಾಡಬೇಕು ಎಂದು ಸೂಚಿಸಿದರು.
ಶಿಕ್ಷಣದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಹತ್ವದ ಹಂತಗಳಾಗಿವೆ. ಬಹಳಷ್ಟು ಮಕ್ಕಳಲ್ಲಿ ಪರೀಕ್ಷಾ ಭಯ ಇರುತ್ತದೆ. ಹಾಗಾಗಿ ಮೇಲಿಂದ ಮೇಲೆ ಕಿರು ಪರೀಕ್ಷೆ ಮತ್ತು ವಿಶೇಷ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಒಟ್ಟಾರೆ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ ಮತ್ತು ಪಿಯು ಶಿಕ್ಷಣ ಇಲಾಖೆಗಳು ಈಗಿಂದಲೇ ಸನ್ನದ್ದವಾಗಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಶಾಲಾ ಕಾಲೇಜುಗಳಲ್ಲಿ ಫಲಿತಾಂಶ ಸುಧಾರಣೆಗೆ ನಿಮ್ಮಲ್ಲಿ ಪ್ಲಾನ್ ಇದೆಯಾ? ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದ ಸಚಿವರು, ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣ ಎಂಬುದರಲ್ಲಿ ಹುರುಳಿಲ್ಲ. ನಮ್ಮಲ್ಲಿ ಶಿಕ್ಷಕರ ಕೊರತೆ ಇಲ್ಲ. ಶಾಲಾ ಕಾಲೇಜುಗಳಿಗೆ ನಿಯಮಿತ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ ಮತ್ತು ಕಲಿಕೆಯ ಗುಣಮಟ್ಟ ಪರಿಶೀಲಿಸದೇ ಮಾನಿಟರಿಂಗ್ ಮಾಡುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಿಂದೆ ಬಿದ್ದಿರುವುದೇ ಫಲಿತಾಂಶ ಕುಸಿಯಲು ಕಾರಣವಾಗಿದೆ. ಇನ್ಮುಂದೆ ಈ ರೀತಿಯಾದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಸಿದರು.