ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಅವರು, ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿದ್ದೆ. ಅಲ್ಲಿ ಎಲ್ಲರೂ ಒಪ್ಪಿಗೆ ಪತ್ರ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹಿಸಿ, ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ. ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ ಎಂದು ಸಿಎಂ ತಿಳಿಸಿದರು.
ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದವರು ತಿಳಿಸಿದರು.




























































