ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ವೈದ್ಯರು ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಿದ್ದರಿಂದ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ವೈದ್ಯರ ಸಲಹೆ-ಸೂಚನೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಎಂದಿನ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.