ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಾಯಕರು ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆ ಉಳಿಸಿಕೊಳ್ಳಲು ರಾಜಕೀಯ ಲೆಕ್ಕಾಚಾರವಾಗಿ ಜಾತಿ ಜನಗಣತಿಯನ್ನು ಮುನ್ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಅನಗತ್ಯ ಹಾಗೂ ವೈಯಕ್ತಿಕ ಪ್ರಶ್ನೆಗಳನ್ನು ಒಳಗೊಂಡಿದೆ ಎಂದು ಅವರು ಟೀಕಿಸಿದರು. “ಕ್ರಿಶ್ಚಿಯನ್ ಲಿಂಗಾಯತ ಅಥವಾ ಕ್ರಿಶ್ಚಿಯನ್ ಬ್ರಾಹ್ಮಣ ಎಂದು ವರ್ಗೀಕರಣ ಮಾಡುವುದರ ಅರ್ಥವೇನು? ಇದು ಹಿಂದೂ ಮತಾಂತರಕ್ಕೆ ಉತ್ತೇಜನ ನೀಡುವ ಸಮೀಕ್ಷೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ-ಲಿಂಗಾಯತ ಮಠಾಧೀಶರೂ ಸಹ ಎಲ್ಲರೂ ಹಿಂದೂಗಳೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ವಿಭಜಿಸಲು ರಾಜಕೀಯ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದರು.