ದಾವಣಗೆರೆ: ಚನ್ನಗಿರಿಯ ಅಜ್ಜಿಹಳ್ಳಿ ಬಳಿ ಹೊಸ ಬಸ್ ಘಟಕವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಮಾತನಾಡಿದ ಸಚಿವರು, “ಚನ್ನಗಿರಿ ತಾಲೂಕಿನ ಬಸ್ ಘಟಕವನ್ನು 4 ಎಕರೆ ಜಮೀನಿನಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈಗಾಗಲೇ ಸಿಬ್ಬಂದಿ ಮತ್ತು ಬಸ್ಸುಗಳನ್ನು ನಿಯೋಜಿಸಲಾಗಿದೆ,” ಎಂದು ತಿಳಿಸಿದರು.
ಈ ಬಸ್ ಘಟಕದ ಆರಂಭದಿಂದ ಚನ್ನಗಿರಿ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ ಎಂದು ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಶಾಸಕ ಬಸವರಾಜ ವಿ. ಶಿವಗಂಗಾ ಮಾತನಾಡಿ, “ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು. ಅದು ಪರಿಹಾರಗೊಂಡಿದೆ. ಹೊಸ ಬಸ್ ನಿಲ್ದಾಣಕ್ಕೆ ಎರಡು ಎಕರೆ ಜಾಗ ಗುರುತಿಸಲಾಗಿದೆ,” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು ಶೀಘ್ರದಲ್ಲೇ ಅನುಮತಿ ನೀಡುವುದಾಗಿ ಭರವಸೆ ನೀಡಿದರು.
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ತಮ್ಮ ಕ್ಷೇತ್ರಕ್ಕೂ ಬಸ್ ನಿಲ್ದಾಣ ನೀಡುವಂತೆ ವಿನಂತಿಸಿದರು. ಜಾಗ ಒದಗಿಸಿದಲ್ಲಿ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಸಮ್ಮತಿಸಿದೆ ಎಂದು ಸಾರಿಗೆ ಸಚಿವರು ಹೇಳಿದರು.
ನಂತರ ಸಚಿವರು ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ಕೌಶಲ್ಯಾಭಿವೃದ್ಧಿ ಇಲಾಖೆಯೊಡನೆ ಮಾತುಕತೆ ನಡೆಸಿ, ತರಬೇತಿ ಕೇಂದ್ರದ ಸದುಪಯೋಗವನ್ನು ಜನತೆಗೆ ಹೆಚ್ಚು ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜೀವ ವೈವಿಧ್ಯ ನಿಗಮ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಅಜ್ಜಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದರಾಜ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.



























































