ಕಲಬುರಗಿ: ಜಿಲ್ಲೆಯ ಸಿಮೆಂಟ್ ಕಾರ್ಖಾನೆಗಳು ತಮ್ಮಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯ (CSR) ಅಡಿ ಕಲಬುರಗಿಯ ಅಭಿವೃದ್ಧಿಗೆ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಕಲಬುರಗಿ ಜಿಲ್ಲೆಯ ಸಿಮೆಂಟ್ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, “ಜಿಲ್ಲೆಯ ಪ್ರಮುಖ ಕೈಗಾರಿಕೆಗಳಾದ ಸಿಮೆಂಟ್ ಉದ್ಯಮಗಳು ಸ್ಥಳೀಯ ಅಭಿವೃದ್ಧಿಗೆ ಸಹಕಾರ ನೀಡುವುದು ಅವಶ್ಯಕ,” ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಮೆಂಟ್ ಕಾರ್ಖಾನೆಗಳ ಚಟುವಟಿಕೆಗಳಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ರೈತರು ನೀಡಿರುವ ದೂರುಗಳನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, “ಮಾಲಿನ್ಯದಿಂದ ಜನರ ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತಿದ್ದು, ಬೆಳೆ ಇಳುವರಿ ಕೂಡ ಕಡಿಮೆಯಾಗುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು,” ಎಂದು ಸೂಚಿಸಿದರು.
“ಸಿಮೆಂಟ್ ಕಾರ್ಖಾನೆಗಳು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮತ್ತು ಪರಿಸರ ಸಂರಕ್ಷಣೆ ಕ್ಷೇತ್ರಗಳಲ್ಲಿ ಯೋಜನೆಗಳನ್ನು ರೂಪಿಸಬೇಕು,” ಎಂದು ಹೇಳಿದರು.
“ಕಲಬುರಗಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಕಾರ್ಖಾನೆಗಳು ಸಹಭಾಗಿಯಾಗಬೇಕು. ತಮ್ಮ ಕೊಡುಗೆಗಳ ರೂಪುರೇಷೆಗಳನ್ನು ಸಿದ್ಧಪಡಿಸಿ ಮುಂದಿನ ಸಭೆಯಲ್ಲಿ ಪ್ರಸ್ತುತಪಡಿಸಬೇಕು,” ಎಂದು ಸಚಿವರು ಸೂಚಿಸಿದರು.


















































