ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್* ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.
ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರು ಕರಳನ್ನು ತೆಗೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಚಿಕಿತ್ಸೆ ಬಳಿಕ ರೋಗಿಯು 2 ದಿನ ವಿಶ್ರಾಂತಿ ಪಡೆದಿದ್ದಾರೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕರುಳು ತೆಗೆಯಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಮಿತಿ ರಚನೆ ಮಾಡಲಾಗಿತ್ತು. ಇದರಲ್ಲಿ ಬಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವಾಗಿಲ್ಲ ಎಂದು ವರದಿ ನೀಡಲಾಗಿದೆ. ಇದರಲ್ಲಿ ವೈದ್ಯ ನಿರ್ಲಕ್ಷ್ಯ ಇಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.



















































