ಬೆಂಗಳೂರು: ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಗುರುತಿಸಲ್ಪಟ್ಟಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 71 ವೈದ್ಯಕೀಯ ಕಾಲೇಜುಗಳಿದ್ದು, ಅವುಗಳಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಾಗಿವೆ ಎಂದು ಅವರು ಮಾಹಿತಿ ನೀಡಿದರು.
ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್‌ಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಯೋಜನೆ ಇದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಈ ಮೂಲಕ ರಾಜ್ಯದ ಜನತೆಗೆ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಆರೋಗ್ಯ ಸೇವೆಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.



















































