ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನಿರ್ದೇಶನದ ಮೇರೆಗೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ.
ತನಿಖಾ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಉಪ ಪೊಲೀಸ್ ಆಯುಕ್ತ ಸುಧೀರ್, ಸಿಸಿಆರ್‌ಬಿ ಉಪ ಪೊಲೀಸ್ ಆಯುಕ್ತ ರಾಮಚಂದ್ರ ಹಾಗೂ ಅಶೋಕನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಸೇರಿದ್ದಾರೆ.
ಐಟಿ ದಾಳಿ ಹಿನ್ನೆಲೆಯಲ್ಲಿ ಉಂಟಾದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಆ ಅಂಶವನ್ನೂ ಒಳಗೊಂಡಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮೊಬೈಲ್ ಫೋನ್ ಪರಿಶೀಲನೆ, ಹಣಕಾಸು ವ್ಯವಹಾರಗಳ ಪರಿಶೋಧನೆ ಸೇರಿದಂತೆ ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಯಲಿದೆ ಎಂದು ತಿಳಿಸಲಾಗಿದೆ.





















































