ಮಂಡ್ಯ: ಕೇಂದ್ರ ಸರ್ಕಾರದ ಯೋಜನೆ ಕುರಿತು ಸುಳ್ಳು ಮಾಹಿತಿ ಒಳಗೊಂಡ ಜಾಹೀರಾತು ಪ್ರಕಟಿಸಲಾಗಿದೆ ಎಂದು ಆರೋಪಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದೆ.
ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು. ಆದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಪತ್ರಿಕೆಗಳಿಗೆ ನೀಡಿರುವ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ ಎಂದು ಬಿಜೆಪಿ ಆರೋಪಿಸಿದೆ. ತೆರಿಗೆದಾರರ ಹಣವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಅಪಪ್ರಚಾರ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಯನ್ನು ಟೀಕಿಸಲಾಗಿದೆ. ಇದು ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದ್ದು, ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಬಿಜೆಪಿ ಹೇಳಿದೆ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಪರಿಗಣಿಸಬಹುದಾಗಿತ್ತು. ಆದರೆ ಸಾರ್ವಜನಿಕ ಹಣವನ್ನು ಬಳಸಿರುವ ಕಾರಣ, ಇದು ಸುಪ್ರೀಂ ಕೋರ್ಟ್ 2015ರಲ್ಲಿ ನೀಡಿದ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆ ಎಂದು ಆರೋಪಿಸಲಾಗಿದೆ.
ಸರ್ಕಾರಿ ಜಾಹೀರಾತುಗಳು ಮಾಹಿತಿಯುಕ್ತವಾಗಿರಬೇಕು ಮತ್ತು ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಯನ್ನು ಉತ್ತೇಜಿಸಲು ಅಥವಾ ವಿರೋಧ ಪಕ್ಷದ ವಿರುದ್ಧ ನಕಾರಾತ್ಮಕ ಚಿತ್ರಣ ಮೂಡಿಸಲು ಸಾರ್ವಜನಿಕ ಹಣ ಬಳಸುವಂತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾಜಕೀಯ ಟೀಕೆಗಳಿಗಾಗಿ ಸರ್ಕಾರಿ ಇಲಾಖೆಯ ಹೆಸರಿನಲ್ಲಿ ಜಾಹೀರಾತು ನೀಡುವುದು ಸಂವಿಧಾನದ 14ನೇ ಮತ್ತು 21ನೇ ವಿಧಿಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದ್ದರೂ, ಸರ್ಕಾರಿ ಯಂತ್ರಾಂಗವನ್ನು ಬಳಸಿಕೊಂಡು ಜನರನ್ನು ದಾರಿ ತಪ್ಪಿಸುವ ಅಥವಾ ಸುಳ್ಳು ಮಾಹಿತಿಯನ್ನು ಹರಡುವ ಅಪಪ್ರಚಾರ ನಡೆಸುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ.





















































